









7-11-2025 ಶುಕ್ರವಾರ ಯಲ್ಲಾಪುರ

ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಪ್ರದರ್ಶನ ಮತ್ತು ಸೇವನೆ ನಡೆಯದಂತೆ ಕಟುನಿಟ್ಟಿನ ಎಚ್ಚರವಹಿಸಿ ಇದನ್ನು ಉಲ್ಲಂಘಿಸುವವರ ವಿರುದ್ದ ಕೋಟ್ಪಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಹಾಗೂ ಈ ಬಗ್ಗೆ ನಿರಂತರವಾಗಿ ಪರಿಶೀಲನೆ ನಡೆಸುವ ಮೂಲಕ ವಿದ್ಯಾರ್ಥಿಗಳು ಈ ದುಶ್ಟಟಕ್ಕೆ ಬಲಿಯಾಗದಂತೆ ಎಚ್ಚರವಹಿಸಬೇಕು, ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ, ತಂಬಾಕು ವ್ಯಸನಗಳಿಗೆ ಬಳಲುತ್ತಿರುವ ವಿದ್ಯಾರ್ಥಿಗಳು ಕಂಡು ಬಂದಲ್ಲಿ ಅವರನ್ನು ವ್ಯಸನಮುಕ್ತರನ್ನಾಗಿ ಮಾಡಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೋಟ್ಪಾ ಕಾಯ್ದೆಯ ಉಲ್ಲಂಘನೆಯ ಕುರಿತಂತೆ ಪರಿಶೀಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ದಾಳಿ ನಡೆಸಬೇಕು ಮತ್ತು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮೆಗಾ ದಾಳಿ ನೆಡೆಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ಆವರಣದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ಕುರಿತಂತೆ ಸಂಬಂಧಪಟ್ಟ ಕಚೇರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪ್ರಸಕ್ತ ಸಾಲಿನ ಅಕ್ಟೋಬರ್ ವರೆಗೆ ಜಿಲ್ಲೆಯಲ್ಲಿ ಕೋಟ್ಪಾ ಅಡಿಯಲ್ಲಿ 675 ಪ್ರಕರಣ ದಾಖಲಿಸಿ ರೂ.88,900 ದಂಡ ಸಂಗ್ರಹಿಸಿದ್ದು, ಎಲ್ಲಾ ತಾಲೂಕುಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ವ್ಯಾಪಾರ ಪರವಾನಗಿಯನ್ನು ನೀಡುವ ಮುನ್ನ ಎಲ್ಲಾ ಷರತ್ತುಗಳನ್ನು ಪಾಲಿಸಿರುವ ಕುರಿತು ಕಟ್ಟುನಿಟ್ಟಿನ ಪರಿಶೀಲನೆ ನಡೆಸಿ, ಉಲ್ಲಂಘನೆ ಕಂಡು ಬಂದಲ್ಲಿ ಪರವಾನಿಗೆ ರದ್ದುಪಡಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಆಭಿಯಾನ ಕಾರ್ಯಕ್ರಮದ ಅಂಗವಾಗಿ ಸಂಬಂಧಪಟ್ಟ ಇಲಾಖೆಗಳ ಸಹಯೋಗದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕುರಿತಂತೆ ಈ ವರ್ಷದಲ್ಲಿ 9 ಪ್ರಕರಣ ಕಂಡು ಬಂದಿದ್ದು 3 ಸಾವುಗಳು ಸಂಭವಿಸಿವೆ. ಈ ಕಾಯಿಲೆಯ ಕುರಿತು ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳ ಕುರಿತಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಅಯೋಜಿಸುವಂತೆ ಮತ್ತು ಅಗತ್ಯ ಸಂಖ್ಯೆಯ ಡೇಪಾ ತೈಲದ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದರು.
ಪ್ರಸವ ಪೂರ್ವದಲ್ಲಿ ಗರ್ಭಿಣಿಯರ ಆರೈಕೆ ಕುರಿತಂತೆ ಆಶಾ ಕಾರ್ಯಕರ್ತೆಯರ ಮೂಲಕ ಹೆಚ್ಚಿನ ಅರಿವು ಮೂಡಿಸಬೇಕು, ತಾಯಿ ಕಾರ್ಡ್ ನ ಪ್ರಯೋಜನಗಳ ಮತ್ತು ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಗರ್ಭಿಣಿ ಮಹಿಳೆಯರಿಗೆ ತಿಳಿಸಬೇಕು, ನವಜಾತು ಶಿಶು ಮರಣ ತಪ್ಪಿಸಲು ಪ್ರಸವದ ನಂತರ ಶಿಶುವಿನ ಆರೈಕೆ ವಿಧಾನಗಳ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದರು.
ಕುಷ್ಠರೋಗ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಮತ್ತು ಕುಷ್ಠರೋಗದಿಂದ ಉಂಟಾಗುವ ನ್ಯೂನತೆಯನ್ನು ಕಡಿಮೆ ಮಾಡಲು ಜಿಲ್ಲೆಯಾದ್ಯಂತ ನವೆಂಬರ್ 11 ರಿಂದ ಡಿಸೆಂಬರ್ 9 ರ ವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನದ ಸರ್ವೆ ಕಾರ್ಯವನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯಕ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಂಕರ್ ರಾವ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಹರ್ಷಾ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕ್ಯಾ. ಡಾ.ರಮೇಶ್ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS





















