ಫೆ.11ರಿಂದ 19ರ ವರೆಗೆ ನಡೆಯುವ ಯಲ್ಲಾಪುರ ಗ್ರಾಮದೇವಿ ಜಾತ್ರೆಯ ಯಶಸ್ಸಿಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಎಲ್ಲ ರೀತಿಯಿಂದ ಸಹಕರಿಸಬೇಕು. ಜಾತ್ರೆಯಲ್ಲಿ ಯಾವುದೇ ಲೋಪದೋಷವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಭದ್ರತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಸೂಚಿಸಿದರು.

ಪಟ್ಟಣದ ಎಪಿಎಂಸಿ ಆವರಣದ ರೈತ ಭವನದಲ್ಲಿ ಸೋಮವಾರ ನಡೆದ ಗ್ರಾಮದೇವಿ ಜಾತ್ರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾತ್ರೆಯು ಊರಿಗೆ ಗೌರವ ತರುವಂತಾಗಬೇಕು. ಜಾತ್ರಾ ಸಂದರ್ಭದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ, ಶೌಚಾಲಯ ವ್ಯವಸ್ಥೆಗಳು ಸರಿಯಾಗಿರುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. 24 ಗಂಟೆ ಕಾರ್ಯ ನಿರ್ವಸುವಂತೆ ಸಹಾಯವಾಣಿಯನ್ನು ಸ್ಥಾಪಿಸಬೇಕು, ವಾಹನಗಳ ದಟ್ಟಣೆ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು,

ಸಂಜೆ ಐದು ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಹೆದ್ದಾರಿಯಲ್ಲಿ ಪಟ್ಟಣದ ಮೂಲಕ ಸಂಚರಿಸುವ ಸರಕು ಸಾಗಿಸುವ ಘನ ವಾಹನಗಳ ಸಂಚಾರಕ್ಕೆ ನಿರ್ಭಂಧಿಸಿ, ಹಂತಹಂತವಾಗಿ ಅವಕಾಶ ಕಲ್ಪಿಸಿ, ಪಟ್ಟಣದ ಹೊರ ವಲಯದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಲಘು ವಾಹನಗಳು ಹಾಗೂ ಬಸ್ಸು, ಪ್ರವಾಸಿ ವಾಹನಗಳ ಸಂಚಾರವನ್ನು ತಡೆಯಬಾರದು, ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು,

ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಬೇಕು. ಹೊಟೇಲ್ ಮತ್ತು ತಿಂಡಿ ಅಂಗಡಿಗಳಲ್ಲಿನ ಆಹಾರ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದ ಅವರು, ಜಾತ್ರಾ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು, ಅನಾವಶ್ಯಕ ತೊಂದರೆ ನೀಡಿದರೆ ಸುಮ್ಮನಿರುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಿಪಿಐ ರಮೇಶ ಹಾನಾಪುರ ಮಾತನಾಡಿ, ವಿವಿದೆಡೆ ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ. ವಾಹನಗಳ ಸಂಚಾರಕ್ಕೆ ಅಗತ್ಯವಾದ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗುವುದು. ಪ್ರಮುಖ ಸ್ಥಳಗಳಲ್ಲಿ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಹೆಚ್ಚುವರಿ ಪೊಲೀಸ್ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ಭದ್ರತೆಗೆ ನೇಮಿಸಲಾಗುವುದು. ಕ್ಯೂ.ಆರ್.ಕೋಡ್ ಮೂಲಕ ಜಾತ್ರೆಯ ಸಮಗ್ರ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಡಿವೈಎಸ್ಪಿ ಗೀತಾ ಪಾಟೀಲ್, ತಹಶೀಲ್ದಾರ್ ಚಂದ್ರಶೇಖರ ಹೊಸಮನಿ, ಗ್ರಾಮದೇವಿ ದೇವಾಲಯದ ಅಧ್ಯಕ್ಷ ರಾಜೇಂದ್ರಪ್ರಸಾದ ಭಟ್ಟ, ಪ್ರಮುಖರಾದ ಪ್ರಮೋದ ಹೆಗಡೆ, ಹರಿಪ್ರಕಾಶ ಕೋಣೆಮನೆ, ನರ್ಮದಾ ನಾಯ್ಕ, ವಿಜಯ ಮಿರಾಶಿ, ವಿ.ಎಸ್.ಭಟ್ಟ ಮುಂತಾದವರು ಇದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅನೇಕರು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಕುಮಾರ ನಾಯ್ಕ ಸ್ವಾಗತಿಸಿದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading