ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಿ: ತಹಶೀಲ್ದಾರ್ ಚಂದ್ರಶೇಖರ ಹೊಸಮನಿ
ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ತಹಶೀಲ್ದಾರ್ ಚಂದ್ರಶೇಖರ ಹೊಸಮನಿ ಹೇಳಿದರು.
ಯಲ್ಲಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬದ ಮೆರವಣಿಗೆ ಮತ್ತು ಶೋಭಾಯಾತ್ರೆಯ ಸಂದರ್ಭದಲ್ಲಿ ಡಿ.ಜೆ.ಬಳಕೆಯನ್ನು ನಿಷೇಧಿಸಲಾಗಿದೆ. ರಸ್ತೆಗಳಲ್ಲಿ ಟ್ರಾಪಿಕ್ ಜಾಮ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು, ಶುಭಾಶಯ ಕೋರುವ ಬ್ಯಾನರ್ ಗಳನ್ನು ಕಟ್ಟಲು ಪಟ್ಟಣ ಪಂಚಾಯತಿಯಲ್ಲಿ ನಿಗದಿತ ಹಣತುಂಬಿ ಅನುಮತಿ ಪಡೆಯಬೇಕು, ಕಾನೂನು ಉಲ್ಲಂಘನೆ ಅಗದಂತೆ ಹಬ್ಬಗಳನ್ನು ಆಚರಿಸಬೇಕು ಎಂದರು.
ಸಿಪಿಐ ರಮೇಶ ಹಾನಾಪುರ ಮಾತನಾಡಿ, ಬೈಕ್ ರ‍್ಯಾಲಿ, ಶೋಭಾಯಾತ್ರೆ ಮತ್ತು ಮೆರವಣಿಗೆ, ರಂಜಾನ್ ಆಚರಣೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಂಘಟಕರು ನಿಗಾ ವಹಿಸಬೇಕು, ಸೈಲೆನ್ಸರ್ ತೆಗೆದು ಬೈಕ್ ಓಡಿಸಬಾರದು, ಕರ್ಕಶ ಶಬ್ದಗಳಿಂದ ಶಬ್ದ ಮಾಲಿನ್ಯ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು, ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಸಂಘಟಕರು ಸ್ವಯಂ ಸೇವಕರನ್ನು ನೇಮಿಸಿಕೊಳ್ಳಬೇಕು, ಕಾನೂನು, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದರು.