ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಿದ್ಧಗೊಂಡ ಪರೀಕ್ಷಾ ಕೇಂದ್ರಗಳು
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಯಲ್ಲಾಪುರ ತಾಲೂಕಿನಲ್ಲಿ ಆರು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ತಿಳಿಸಿದ್ದಾರೆ. ಅವರು ಮಂಗಳವಾರ ಪರೀಕ್ಷಾ ಕೇಂದ್ರಗಳಿಗೆ ಭೇಟಿನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ನಂತರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ವಿವಿಧ ಪರೀಕ್ಷಾ ಕೇಂದ್ರಗಳಿಗೆ ಬಿಇಒ ರೇಖಾ ನಾಯ್ಕ ಮಂಗಳವಾರ ಭೇಟಿನೀಡಿದರು
ಈ ಬಾರಿ ಒಟ್ಟೂ 986 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ನೀಡಲು ಮತ್ತು ಉತ್ತರ ಪತ್ರಿಕೆ ತರಲು ಒಟ್ಟು ಮೂರು ಮಾರ್ಗಗಳನ್ನು ಮಾಡಲಾಗಿದ್ದು, ಪ್ರತೀ ಮಾರ್ಗಕ್ಕೆ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿಗಳ ನೇಮಕ ಮಾಡಲಾಗಿದ್ದು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಪಟ್ಟಣದ ವಾಯ್.ಟಿ.ಎಸ್.ಎಸ್. ಸಂಯುಕ್ತ ಪದವಿ ಕಾಲೇಜು, ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆ, ವಿಶ್ವದರ್ಶನ ಕನ್ನಡ ಮಾಧ್ಯಮ ಶಾಲೆ, ಮಂಚಿಕೇರಿಯ ಶ್ರೀರಾಜರಾಜೇಶ್ವರಿ ಪ್ರೌಢಶಾಲೆ, ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆ, ಕಿರವತ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಬಿಇಒ ರೇಖಾ ನಾಯ್ಕ ಮಾಹಿತಿ ನೀಡಿದ್ದಾರೆ. ಮಾ.18ರಿಂದ ಏ.2ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.