ಪ.ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿನಿರ್ದೇಶನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೆರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ತಕ್ಷಣವೇ ಸಂತ್ರಸ್ತರಿಗೆ ಸ್ಪಂದಿಸಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ದೌರ್ಜನ್ಯದ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಮೀಸಲಿಟ್ಟ ನಿವೇಶಗಳನ್ನು ಅತಿಕ್ರಮಣ ಮಾಡಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು ಈ ಬಗ್ಗೆ ಸಮಗ್ರ ವರದಿ ನೀಡುವಂತೆ ತಿಳಿಸಿದ ಅವರು, ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ ವೈ.ಕೆ., ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿ ಸದಸ್ಯರು ಮತ್ತಿತರರು ಇದ್ದರು.