ರಕ್ತದಾನವು ದಾನಿಯ ಆರೋಗ್ಯಕ್ಕೆ ಬಹಳ ಒಳ್ಳೆಯದು, ನಿರಂತರವಾಗಿ ರಕ್ತದಾನ ಮಾಡುವುದರಿಂದ ಹೃದಯದ ಆರೋಗ್ಯವೂ ವೃದ್ಧಿಸುತ್ತದೆ. ದೇಹದ ಕಾಂತಿಯೂ ಹೆಚ್ಚುತ್ತದೆ. ವಿವಿಧ ಖಾಯಿಲೆಗಳೂ ಕಡಿಮೆಯಾಗುತ್ತವೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ಹೇಳಿದರು.
ಪಟ್ಟಣದ ಅಡಿಕೆ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ರೋಗಿಗಳಿಗೆ ಸಕಾಲಕ್ಕೆ ರಕ್ತ ಸಿಗದೇ ಅನೇಕ ಸಾವುಗಳು ಸಂಭವಿಸುತ್ತಿವೆ. ಜೀವ ಉಳಿಸಲು ರಕ್ತದಾನ ಬಹಳ ಸಹಕಾರಿಯಾಗಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕಿಂತ ರಕ್ತದಾನ ಶಿಬಿರ ಆಯೋಜಿಸುವುದು ಹೆಚ್ಚು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ.ಜನಾರ್ಧನ ಮಾತನಾಡಿ, ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವುದು ಪುಣ್ಯದ ಕೆಲಸವಾಗಿದೆ. ಹಣದ ಪ್ರತಿಫಲಾಪೇಕ್ಷೆ ಇಲ್ಲದೇ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷ MJF ಶೇಷಗಿರಿ ಪ್ರಭು ಮಾತನಾಡಿ, ಸಮಾಜ ಸೇವೆಯು ನಮ್ಮ ಬದುಕಿನ ಮುಖ್ಯ ಗುರಿಯಾಗಿರಬೇಕು, ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದೆ. ಇಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಲಯನ್ಸ್ ಕ್ಲಬ್ ಸಹಯೋಗ ನೀಡಿದೆ. ಮುಂದಿನ ದಿನಗಳಲ್ಲಿ ರಕ್ತದಾನದ ಮಹತ್ವದ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಲಾಗುವುದು ಎಂದರು.