ಹೆಚ್.ಪಿ.ವಿ. ಲಸಿಕೆ ನೀಡಿ, ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಿಸಿ : ಜಿಲ್ಲಾಧಿಕಾರಿ
ಮಹಿಳೆಯರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 14-15 ವಯಸ್ಸಿನ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ. ಲಸಿಕೆ ನೀಡುವ ಮೂಲಕ ಅವರನ್ನು ಈ ಕ್ಯಾನ್ಸರ್ ನಿಂದ ರಕ್ಷಿಸಬಹುದಾಗಿದ್ದು, ಜಿಲ್ಲೆಯ ಅರ್ಹ ಎಲ್ಲಾ ಹೆಣ್ಣುಮಕ್ಕಳಿಗೆ ಈ ಲಸಿಕೆಯನ್ನು ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಹೆಚ್.ಪಿ.ವಿ ಲಸಿಕಾ ಕಾರ್ಯಕ್ರಮದ ಪ್ರಗತಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಕಂಡು ಬರುವ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಎಂದು ಪರಿಗಣಿಸಲಾಗಿದ್ದು, ಗರ್ಭಕಂಠದ ಕ್ಯಾನ್ಸರ್ ಗೆ ಒಳಗಾಗುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ವತಿಯಿದ ಜಿಲ್ಲೆಯ 14 ರಿಂದ 15 ವಷರ್Àದೊಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೆಚ್.ಪಿ.ವಿ. ಲಸಿಕೆ ನೀಡುವಂತೆ ತಿಳಿಸಿದರು.
ಶಿಕ್ಷಣ ಇಲಾಖೆಯ ಮೂಲಕ ಜಿಲ್ಲೆಯ ಅರ್ಹ ಹೆಣ್ಣು ಮಕ್ಕಳ ಪೋಷಕರಿಗೆ ತಮ್ಮ ಮಕ್ಕಳಿಗೆ ಹೆಚ್.ಪಿ.ವಿ. ಲಸಿಕೆ ನೀಡುವ ಕುರಿತು ಮಾಹಿತಿ ನೀಡುವಂತೆ ತಿಳಿಸಿದ ಅವರು, ಲಸಿಕೆಯ ಕುರಿತ ಅರಿವು ಮತ್ತು ಜಾಗೃತಿ ಮೂಡಿಸುವ ಮಾಹಿತಿಯನ್ನು ಪೋಷಕರಿಗೆ ತಲುಪಿಸುವಂತೆ ಮತ್ತು ಜಿಲ್ಲೆಯ ಎಲ್ಲಾ ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ವಾಹನಗಳ ಮೂಲಕ ಲಸಿಕೆಯ ಮಹತ್ವದ ಕುರಿತು ವ್ಯಾಪಕ ಅರಿವು ಮೂಡಿಸುವಂತೆ ತಿಳಿಸಿದರು.
ಹೆಚ್.ಪಿ.ವಿ. ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು, ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೇ ಇರುವುದು ದೃಢಪಟ್ಟಿರುವುದರಿಂದ ಜಿಲ್ಲೆಯ ಎಲ್ಲಾ ಪೋಷಕರು ತಮ್ಮ ಅರ್ಹ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಕೊಡಿಸುವ ಮೂಲಕ ತಮ್ಮ ಮಕ್ಕಳು ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್‍ಗೆ ಒಳಗಾಗುವುದನ್ನು ತಪ್ಪಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದ್ದು, ಅಗತ್ಯ ಪ್ರಮಾಣದ ಲಸಿಕೆಗಳ ದಾಸ್ತಾನು ಲಭ್ಯ ಇದೆ ಎಂದರು.
ಜಿಲ್ಲೆಯಲ್ಲಿ ಅಭಿಯಾನ ರೂಪದಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್‍ನ ಅಧಿಕಾರಿಗಳು ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಅಗತ್ಯವಿರುವ ಸಹಕಾರವನ್ನು ನೀಡುವುದರ ಮೂಲಕ ಜಿಲ್ಲೆಯ ಅರ್ಹ ಎಲ್ಲಾ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಿ ಶೇ.100 ಪ್ರಗತಿ ಸಾಧಿಸಬೇಕು ಮತ್ತು ಲಸಿಕೆಯಿಂದ ಯಾರೂ ವಂಚಿತರಾಗದಂತೆ ಎಚ್ಚರವಹಿಸಿ ಎಂದು ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ದಡಾರ ಮತ್ತು ರೂಬೆಲ್ಲಾ ನಿಯಂತ್ರಣ ಕುರಿತಂತೆ ಅಗತ್ಯ ಮುನ್ನಚ್ಚರಿಕೆ ಕ್ರಮಗಳು ಮತ್ತು ಲಸಿಕಾ ಅಭಿಯಾನವನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಡಾ.ಕ್ಯಾ,ರಮೇಶ್ ರಾವ್, ಡಾ.ಹರ್ಷಾ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಹಾಜರಿದ್ದರು.