ಜಿಲ್ಲೆಯಲ್ಲಿ ಆಗಸ್ಟ್ 2 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಇಲಾಖೆಯ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಯನ್ನು ನೆಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪೊಲೀಸ್ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ಪರೀಕ್ಷೆಯು ಕಾರವಾರದ 15 ಮತ್ತು ಅಂಕೋಲಾದ 5 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 6,475 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿzದ್ದಾರೆ.

ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚಿಸಿದ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ಗಳ ಕೊರತೆಯಾಗದಂತೆ ಮತ್ತು ಕೇಂದ್ರಗಳ ಸಮೀಪ ನಿಲುಗಡೆ ನೀಡುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಕಡಿತವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪರೀಕ್ಷಾ ಪ್ರಾಧಿಕಾರದ ಸೂಚನೆಯಂತೆ ಅಭ್ಯರ್ಥಿಗಳ ಡ್ರೆಸ್‍ಕೋಡ್ ಮತ್ತು ನಿಷೇಧಿತ ವಸ್ತುಗಳ ಪರಿಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಯಾವುದೇ ಅನಗತ್ಯ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ತಪಾಸಣಾ ಕೊಠಡಿ ಇರಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ವತಿಯಿಂದ ಎಲ್ಲಾ ಕೇಂದ್ರಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಹೊರತುಪಡಿಸಿ ಇತರೇ ಯಾರಿಗೂ ಕೇಂದ್ರದೊಳಗೆ ಪ್ರವೇಶಿಸಲು ಅನುಮತಿಯಿಲ್ಲ. ಮಾಧ್ಯಮಗಳಿಗೂ ಕೇಂದ್ರದ ಒಳಗೆ ಪ್ರವೇಶವಿಲ್ಲ. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭದ ಕನಿಷ್ಠ 2 ಗಂಟೆಗಳ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು,ಸೂಕ್ತ ಗುರುತಿನ ಚೀಟಿ ಹೊಂದಿರಬೇಕು ಎಂದರು.

ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿಸಿಟಿವಿ ಕಣ್ಗಾವಲು, ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು, ವೈಯಕ್ತಿಕ ವಸ್ತುಗಳು ಅಥವಾ ಅಧ್ಯಯನ ಸಾಮಗ್ರಿಗಳನ್ನು ತರಲು ಅವಕಾಶವಿರುವುದಿಲ್ಲ. ಅಲ್ಲದೆ, ಇಂತಹ ವಸ್ತುಗಳನ್ನು ಕೇಂದ್ರದಲ್ಲಿ ಸುರಕ್ಷಿತವಾಗಿ ಇರಿಸಿಕೊಳ್ಳಲು ಯಾವುದೇ ವ್ಯವಸ್ಥೆ ಇರುವುದಿಲ್ಲ.

ನಿಷೇಧಿತ ವಸ್ತುಗಳ ಪಟ್ಟಿಯಲ್ಲಿ ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಜ್ಯಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಹ್ಯಾಂಡ್‍ಬ್ಯಾಗ್, ಬೆಲ್ಟ್, ಕ್ಯಾಪ್, ಗಾಗಲ್ಸ್, ಕೈಗಡಿಯಾರ, ಬಳೆ, ಕ್ಯಾಮೆರಾ, ಮೈಕ್ರೋಚಿಪ್ ಸೇರಿದಂತೆ ಯಾವುದೇ ಗುಪ್ತ ಎಲೆಕ್ಟ್ರಾನಿಕ್ ಸಾಧನಗಳು ಸೇರಿವೆ. ಆಹಾರ ಪದಾರ್ಥಗಳು ಹಾಗೂ ನೀರಿನ ಬಾಟಲಿಯನ್ನೂ ಕೂಡಾ ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿಲ್ಲ.

ಡ್ರೆಸ್ ಕೋಡ್‍ನಂತೆ ಪೂರ್ಣ ತೋಳಿನ (ಫುಲ್ ಸ್ಲೀವ್ಸ್) ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಆದರೆ ಮೂಗುತಿ ಹಾಗೂ ಮಂಗಳಸೂತ್ರಕ್ಕೆ ವಿನಾಯಿತಿ ನೀಡಲಾಗಿದೆ. ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ಬೂಟುಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ ಧರಿಸುವಂತೆ ಸೂಚಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪರೀಕ್ಷೆ ಆರಂಭವಾದ ಬಳಿಕ ಪರೀಕ್ಷಾ ಕೊಠಡಿಗೆ ಪೊಲೀಸ್ ಅಧಿಕಾರಿಗಳಿಗೂ ಪ್ರವೇಶವಿಲ್ಲ. ಪರೀಕ್ಷಾ ಹಿಂದಿನ ದಿನ ಕೇಂದ್ರಗಳಿಗೆ ಬರುವ ಎಲ್ಲಾ ವಾಹನಗಳ ವಿವರ ದಾಖಲಿಸುವ ಲಾಗ್ ಮಾಹಿತಿ ಇಡಬೇಕು. ಗುರುತಿನ ಚೀಟಿ ಇಲ್ಲದ ಅನಧಿಕೃತ ವ್ಯಕ್ತಿಗಳ ಪ್ರವೇಶದ ಬಗ್ಗೆ ನಿಗಾ ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಎಲ್ಲಾ ಅಧಿಕಾರಿಗಳು ಇದ್ದರು.

===============

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading