ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಕಾರವಾರ ಮತ್ತು ಅಂಕೋಲಾದಲ್ಲಿ ಜರುಗಿದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ, ಸುಗಮ ಹಾಗೂ ಶಾಂತಿಯುತವಾಗಿ ನೆರವೇರಿತು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ, ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹಾಗೂ ಅಭ್ಯರ್ಥಿಗಳಿಗೆ ಒದಗಿಸಿರುವ ಸೌಲಭ್ಯಗಳು, ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಪೊಲೀಸ್ ಕಾನ್ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಕಾರವಾರದಲ್ಲಿ 15 ಹಾಗೂ ಅಂಕೋಲಾದಲ್ಲಿ 5 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪರೀಕ್ಷೆ ಬರೆಯಲು ಒಟ್ಟು 6,475 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 5,783 ಮಂದಿ ಪರೀಕ್ಷೆಗೆ ಹಾಜರಾಗಿದ್ದು,692 ಅಭ್ಯರ್ಥಿಗಳು ಗೈರಾಗಿದ್ದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಹಾಗೂ ಮೊಬೈಲ್ ಜಾಮರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೆ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಸಂಖ್ಯೆ ಯಲ್ಲಿ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳ ಸುತ್ತ ಹಾಗೂ ಮಾರ್ಗಾಧಿಕಾರಿಗಳ ತಂಡಕ್ಕೆ ಪೊಲೀಸರನ್ನು ನೇಮಿಸಿ ಭದ್ರತೆ ಕಲ್ಪಿಸಲಾಗಿತ್ತು. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಭಾನುವಾರ ಜರುಗಿದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು, ಅತ್ಯಂತ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ, ಪರೀಕ್ಷಾ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಯಾವುದೇ ಗೊಂದಲಗಳಿಲ್ಲದೆ ಸುಗಮ ಮತ್ತು ಶಾಂತಿಯುತವಾಗಿ ಜರುಗಿತು.

===================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading