ಕಾಂಗ್ರೆಸ್ ಪಕ್ಷ ಸಣ್ಣ ಜಾತಿ ಹಾಗೂ ಹಿಂದುಳಿದ ವರ್ಗದ ವಿರೋಧಿ ಎಂದು ಸಾಬೀತುಪಡಿಸಿದೆ : ಅನಂತಮೂರ್ತಿ ಹೆಗಡೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ನೀಡದಿರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನರಿಗೆ ಅವಮಾನ ಮಾಡಿದ್ದು ಜನತೆಯ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಇದನ್ನು ಜಿಲ್ಲೆಯ ಜನರು ಯಾವತ್ತೂ ಕ್ಷಮಿಸಿಸುವುದಿಲ್ಲ, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ಎಂದು ಅಧಿಕೃತವಾಗಿ ಪ್ರಕಟಿಸಿ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನದಿಂದ ವಂಚಿಸುವುದರ ಮೂಲಕ ಅವಮಾನ ಮಾಡಿದೆ. ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕೈಬಿಟ್ಟು ಬೇರೆಯವರಿಗೆ ಅವಕಾಶ ನೀಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಹಿಂದುಳಿದ ವರ್ಗದ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದರು.
ಈ ಕುರಿತು ಸೋಮವಾರ ಪ್ರಕಟಣೆ ನೀಡಿದ ಅವರು, ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನಕ್ಕೆ ಮಂಕಾಳು ವೈದ್ಯರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಬಳಿಕ ಎಸ್.ಎಸ್. ಮಲ್ಲಿಕಾರ್ಜುನ್ ಎಂದು ಬರೆಯುವ ಬದಲು ಪ್ರಿಂಟಿಂಗ್ ದೋಷದಿಂದ ಮಂಕಾಳು ವೈದ್ಯರ ಹೆಸರು ಪ್ರಕಟವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಬಾಲಿಶ ಸಮಜಾಯಿಷಿ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಟೀಕಿಸಿದರು.
ಕಲಬುರಗಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ, ಭೌಗೋಳಿಕವಾಗಿ ಗೋವಾ ರಾಜ್ಯಕ್ಕಿಂತ ಸುಮಾರು ಮೂರು ಪಟ್ಟು ದೊಡ್ಡದಾಗಿರುವ ಉತ್ತರ ಕನ್ನಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡಿಲ್ಲ. ಇದರ ಮೂಲಕ ಜಿಲ್ಲೆಗೆ ಹಾಗೂ ಹಿಂದುಳಿದ ವರ್ಗದವರಿಗೆ ತೀವ್ರ ಅನ್ಯಾಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರು ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು. ಇಂತಹ ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಗೆ ಉಸ್ತುವಾರಿ ಸಚಿವರನ್ನೂ ನೇಮಿಸದೇ ಸರ್ಕಾರ ಅನ್ಯಾಯ ಮಾಡಿದೆ. ಇದನ್ನು ಜಿಲ್ಲೆಯ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.