ರಾಜ್ಯದಲ್ಲಿ ಆಡಳಿತ ವ್ಯವಸ್ಥೆಗೆ ವೇಗ ನೀಡುವ ಜತೆಗೆ ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಮುಂದಿನ 100 ದಿನಗಳಲ್ಲಿ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ 100 ದಿನಗಳೊಳಗೆ 10 ಪ್ರಮುಖ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ರೈತ ಮಿತ್ರ-ಬಡವರ ಬಂಧು, ಗ್ರಾಮಾನುಭವ, ಯುವ ಯುಗ-ಯುವ ಕರ್ನಾಟಕ ನಿರ್ಮಾಣ, ಭಾರತ್ ಜೋಡೋ ಯುವಕ ಸಂಘ ಮಿಷನ್, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ ಇಲಾಖೆ, ಭೂ ಗ್ಯಾರಂಟಿ, ಕರ್ನಾಟಕ ಮೊಬಿಲಿಟಿ ಗ್ರಿಡ್ ಮಿಷನ್ ಹಾಗೂ ತೇಗದ ಸಿರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ನೇಮಕಾತಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವಂತೆ ಮತ್ತು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಕೋಟ್ಯಂತರ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ರೂ.639.88 ಕೋಟಿ, ಅನ್ನಭಾಗ್ಯ ಯೋಜನೆಯಡಿ ರೂ.298.89 ಕೋಟಿ, ಯುವನಿಧಿಯಡಿ ರೂ.25.64 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ರೂ.1,811.84 ಕೋಟಿ ಹಾಗೂ ಗೃಹಜ್ಯೋತಿ ಯೋಜನೆಯಡಿ ರೂ.641.45 ಕೋಟಿ ನೆರವು ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಮಳೆಯಲ್ಲಿ ಶೇ.16ರಷ್ಟು ಕೊರತೆ ದಾಖಲಾಗಿದೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು ಪೂರೈಕೆಗಾಗಿ 72 ಖಾಸಗಿ ಕೊಳವೆಬಾವಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ರೂ.1 ಕೋಟಿ ಅನುದಾನ ನೀಡಲಾಗಿದೆ. ವಿಕೋಪ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದರು.

ಜಿಲ್ಲೆಯಲ್ಲಿ ಎಲ್‍ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 25 ಶಾಲೆಗಳನ್ನು ಗುರುತಿಸಲಾಗಿದೆ. ಸಿಎಸ್‍ಆರ್ ನಿಧಿಯಡಿ ಈ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಉದ್ಯಮಿಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಶಾಲೆಗಳ ಸೌಲಭ್ಯಗಳನ್ನು ಸುಧಾರಿಸಲಾಗುವುದು ಎಂದು ಹೇಳಿದರು.

ಉದ್ಯೋಗ ಖಾತರಿ ಯೋಜನೆಯಡಿ 1.85 ಲಕ್ಷ ಮಾನವ ದಿನಗಳನ್ನು ಸೃಜಿಸಿ 10,072 ಕೂಲಿಕಾರರಿಗೆ ಕಾಮಗಾರಿ ನೀಡಲಾಗಿದೆ. ವಿ.ಬಿ.ಜಿ. ರಾಮ್‍ಜಿ ಯೋಜನೆಯಡಿ 9,000 ಮಾನವ ದಿನಗಳನ್ನು ಸೃಜಿಸಿ 1,089 ಕೂಲಿಕಾರರಿಗೆ ಕೆಲಸ ನೀಡಲಾಗಿದೆ. ಒಟ್ಟು ರೂ.23.28 ಕೋಟಿ ವೆಚ್ಚ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 12 ಸಾವಿರ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಬರ ತಡೆಗಟ್ಟುವಿಕೆ, ಪ್ರವಾಹ ನಿಯಂತ್ರಣ, ಭೂಕುಸಿತ ನಿಯಂತ್ರಣ, ಅರಣೀಕರಣ, ವೈಯಕ್ತಿಕ ಫಲಾನುಭವಿ ಆಧಾರಿತ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದರು.

ಜಿಲ್ಲೆಗೆ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದು, ಮೊದಲ ಹಂತದಲ್ಲಿ ಸರ್ಕಾರ ರೂ.100 ಕೋಟಿ ಬಿಡುಗಡೆ ಮಾಡಿದೆ. ಆಸ್ಪತ್ರೆಯಲ್ಲಿ ಎಂಆರ್‍ಐ ಹಾಗೂ ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ. ಲಿನಾಕ್ ಬಂಕರ್ ಕಾಮಗಾರಿ ಪ್ರಗತಿಯಲ್ಲಿದ್ದು, ರೇಡಿಯಾಲಜಿ ಯಂತ್ರದ ಅಳವಡಿಕೆ ಬಾಕಿಯಿದೆ. ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಕೇರ್ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಎಲ್ಲ ಜಾತಿ, ಮತ ಹಾಗೂ ಧರ್ಮದ ಜನರು ಒಗ್ಗೂಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅದೇ ಒಗ್ಗಟ್ಟಿನಿಂದ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕು. ಜಾತಿ, ಮತ, ಧರ್ಮ ಹಾಗೂ ಭಾಷೆÉಯ ಆಧಾರದ ಭೇದಭಾವಗಳನ್ನು ಮರೆತು ದೇಶದ ವೈವಿಧ್ಯತೆಯನ್ನು ಗೌರವಿಸಿ, ಅಖಂಡತೆಯನ್ನು ಕಾಪಾಡುತ್ತ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದರ ಜತೆಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡುವ ಮೂಲಕ ಸ್ವಸ್ಥ, ಸಮೃದ್ಧ ಹಾಗೂ ಸಮಾನತೆಯ ಸಮಾಜ ನಿರ್ಮಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಎಸ್‍ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಜಲಸಾರಿಗೆ ಮಂಡಳಿಯ ಸಿಇಓ ಬಾಲಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಪೆÇಲೀಸ್, ಅರಣ್ಯ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕಷರ್Àಕ ಪಥಸಂಚಲನ ನಡೆಯಿತು.

ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾರತ್ ಜೋಡೋ ಯುವ ಮಿಷನ್ ಸದಸ್ಯತ್ವ ಕಾರ್ಡ್ ವಿತರಿಸಲಾಯಿತು. ಅರಣ್ಯ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ನಕ್ಷೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಡೈರೆಕ್ಟರಿಯನ್ನು ಬಿಡುಗಡೆ ಮಾಡಲಾಯಿತು.

====================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading